ಪ್ರಕೃತಿ ಬೆಳಗಾವಿ

*ಬೆಳಗಾವಿ ಮಹಾನಗರ ಪಾಲಿಕೆ ವಿರುದ್ಧ ಕನ್ನಡ ಸಂಘಟನೆಗಳ ಆಕ್ರೋಶ*

ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸಲು ನಿರಾಕರಣೆ:

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಲು ನಿರಾಕರಿಸುತ್ತಿರುವುದನ್ನು ಕನ್ನಡ ನಾಡು, ನುಡಿ ಹಾಗೂ ಗಡಿ ಹಿತಾಸಕ್ತಿಗೆ ವಿರುದ್ಧವಾದ ನಡೆ ಎಂದು ಪರಿಗಣಿಸಿರುವ ಕನ್ನಡ ಸಂಘಟನೆಗಳು ರಾಜ್ಯ ಸರ್ಕಾರದ ಮಧ್ಯಪ್ರವೇಶಕ್ಕೆ ಆಗ್ರಹಿಸಿವೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದ್ದು, ಗಡಿ ವಿವಾದಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ ಎಂದು ಘೋಷಿಸುವ ಗೊತ್ತುವಳಿಯನ್ನು ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕೆಂದು ಒತ್ತಾಯಿಸಿ ಬೆಳಗಾವಿಯ 20ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಕಳೆದ ಮಾರ್ಚ್ 26ರಿಂದ ನಿರಂತರ ಹೋರಾಟ ನಡೆಸುತ್ತಿವೆ.

2005ರ ಅಕ್ಟೋಬರ್ 27ರಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹಾರಾಷ್ಟ್ರ ಪರವಾದ ಗೊತ್ತುವಳಿಯನ್ನು ಅಂಗೀಕರಿಸಲಾಗಿತ್ತು. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮೂಲಕ ಗಡಿ ವಿವಾದ ಬಗೆಹರಿಸಬೇಕೆಂದು ಒತ್ತಾಯಿಸುವ ಆ ಗೊತ್ತುವಳಿಯನ್ನು ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಗಡಿ ವಿವಾದ ಪ್ರಕರಣಕ್ಕೆ ಪೂರಕ ದಾಖಲೆಯಾಗಿ ಬಳಸುತ್ತಿದೆ ಎಂದು ಕನ್ನಡ ಸಂಘಟನೆಗಳು ಆರೋಪಿಸಿವೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸುವಂತೆ ಎರಡು ತಿಂಗಳಿಗೂ ಹೆಚ್ಚು ಕಾಲ ಹೋರಾಟ ನಡೆಸಿದರೂ, ಪಾಲಿಕೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಸದಸ್ಯರು ಮತ್ತು ನಾಯಕರು ಈ ಕುರಿತು ಕ್ರಮ ಕೈಗೊಂಡಿಲ್ಲ ಎಂದು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.

ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸದಿರುವುದು ಕನ್ನಡ ನಾಡು, ನುಡಿ ಮತ್ತು ಗಡಿ ಹಿತಾಸಕ್ತಿಗೆ ಮಾಡಿದ ದ್ರೋಹವಾಗಿದೆ ಎಂದು ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರದ ಗಮನ ಸೆಳೆದು, ಮಹಾನಗರ ಪಾಲಿಕೆಯ ನಿಲುವಿನ ಕುರಿತು ಸೂಕ್ತ ವರದಿ ಸಲ್ಲಿಸಬೇಕೆಂದು ಕನ್ನಡ ಸಂಘಟನೆಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿವೆ.************************************

Leave a Reply

Your email address will not be published. Required fields are marked *

Back to top button