ಪ್ರಕೃತಿ ಬೆಳಗಾವಿ

*10ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನೊಬ್ಬನಿಗೆ ಪೋಷಕರು ಥಳಿಸಿದ್ದಾರೆ*

*ಬೆಳಗಾವಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಪೋಷಕರಿಂದ ಥಳಿತ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : 10ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನೊಬ್ಬನಿಗೆ ಪೋಷಕರು ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಚಿಕ್ಕೋಡಿಯ ಉರ್ದು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಶೈಲ್ ಕುಂಬಾರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.

ಕನ್ನಡ ವಿಷಯದಲ್ಲಿ ಉತ್ತೀರ್ಣಗೊಳಿಸುವುದಾಗಿ ಆಮಿಷವೊಡ್ಡಿ, ಕೆಲ ವಿದ್ಯಾರ್ಥಿಗಳನ್ನು ಶಾಲೆಯ ಕೊಠಡಿ ಹಾಗೂ ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ.ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದೇ ರೀತಿಯ ಕಿರುಕುಳ ನೀಡಿರುವ ಮಾಹಿತಿ ಹೊರಬಿದ್ದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡು ಥಳಿಸಿದ್ದಾರೆ.

ಈ ವೇಳೆ ಶಾಲಾ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಶಿಕ್ಷಕ ಶ್ರೀಶೈಲ್ ಕುಂಬಾರನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಪೋಷಕರು ಹಾಗೂ ಶಾಲಾ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ಆರೋಪಗಳ ಕುರಿತು ಸಮಗ್ರ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.
ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದ್ದು, ಪೊಲೀಸರು ಕಾನೂನು ಕ್ರಮ ಮುಂದುವರಿಸಿದ್ದಾರೆ.****************************

Leave a Reply

Your email address will not be published. Required fields are marked *

Back to top button