ಪ್ರಕೃತಿ ಬೆಳಗಾವಿ

*ಭಾರತ ಜೋಡೋ ಯುವ ಸಂಘ’ ರಚಿಸಲು ಕ್ರಮವಹಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಭಾರತ ಜೋಡೋ ಯುವ ಸಂಘಗಳನ್ನು ರಚಿಸಲು ಕ್ರಮವಹಿಸುವಂತೆ ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ನಿಯಮಾನುಸಾರ ಯುವ ಸಂಘಗಳನ್ನು ರಚಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಕೂಲಿಕಾರರಿಗೆ ಕೆಲಸ ನೀಡಿ:

ವಿಬಿ-ಜಿ ರಾಮ್ ಜಿ’ ಯೋಜನೆಯಡಿ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿಕಾರರಿಗೆ ಕೆಲಸ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಪಂಚಾಯಿತಿಯಿಂದ ತುರ್ತಾಗಿ ಹಲವು ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಹೀಗಾಗಿ, ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಕೂಲಿಕಾರರಿಗೆ ಕೆಲಸ ನೀಡಬೇಕು. ಸಕಾಲಕ್ಕೆ ಕೂಲಿ ಪಾವತಿಗೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಮಾನವ ದಿನಗಳ ಸೃಜನೆಗೆ ಆದ್ಯತೆ ನೀಡಬೇಕು. ಅನುಷ್ಟಾನ ಇಲಾಖೆಗಳಿಂದಲೂ ಕೂಡ ಕಾಮಗಾರಿಗಳನ್ನು ಆರಂಭಿಸಿ, ಕೂಲಿಕಾರರಿಗೆ ಸಕಾಲಕ್ಕೆ ಕೆಲಸ ಒದಗಿಸಬೇಕು. ಕಾಮಗಾರಿಗಳನ್ನು ನಿಯಮಾನುಸಾರ ಮಾಡಬೇಕು. ಎನ್.ಎಮ್.ಎಮ್.ಎಸ್. ಹಾಜರಾತಿಯನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಕೈಗೊಳ್ಳಿ:
ಜಿಲ್ಲೆಯ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಘನ ಮತ್ತು ದ್ರವ ತ್ಯಾಜ್ಯ ವಿರ್ವಹಣಾ ಘಟಕಗಳು ಹಾಗೂ ವಿಲೇವಾರಿ ವಾಹನಗಳನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಕೆಲವು ಗ್ರಾಪಂಗಳಲ್ಲಿ ನಿರ್ಮಿಸಲಾಗಿರುವ ಪ್ಲಾಸ್ಟಿಕ್ ನಿರ್ವಹಣಾ ಘಟಕಗಳನ್ನು ಕೂಡಲೇ ಕಾರ್ಯಾಚರಣೆಗೊಳಿಸಬೇಕು ಎಂದು ಸೂಚನೆ ನೀಡಿದರು.

ಜೆಜೆಎಮ್ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವುದು, ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕ್ರಮವಹಿಸುವುದು, ನೀರಿನ ಪರೀಕ್ಷೆ ಕೈಗೊಳ್ಳುವುದು, ವಿವಿಧ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ವಿವಿಧ ಸೂಚನೆಗಳನ್ನು ಅವರು ನೀಡಿದರು.

ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕರಾದ ಶ್ರೀ ರವಿ ಬಂಗಾರೆಪ್ಪನವರ್, ಉಪಕಾರ್ಯದರ್ಶಿಗಳಾದ ಶ್ರೀ ಬಸವರಾಜ ಹೆಗ್ಗನಾಯಕ್ (ಆಡಳಿತ), ಉಪಕಾರ್ಯದರ್ಶಿಗಳಾದ ಶ್ರೀ ಬಸವರಾಜ ಅಡವಿಮಠ (ಅಭಿವೃದ್ಧಿ), ಮುಖ್ಯ ಲೆಕ್ಕಾಧಿಕಾರಿಗಳಾದ ಶ್ರೀ ಪರಶುರಾಮ ದುಡಗುಂಟಿ ಸೇರಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.**********************************

Leave a Reply

Your email address will not be published. Required fields are marked *

Back to top button