ಪ್ರಕೃತಿ ಬೆಳಗಾವಿ

*ಶ್ರಾವಣ ಮಾಸದಲ್ಲಿ ಮಾಂಸ ಮಾರಾಟ ನಿಷೇಧಕ್ಕೆ ಜೆಡಿಎಸ್ ಯುವ ಘಟಕ ಮನವಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಹಿಂದೂಗಳ ಪವಿತ್ರ ಶ್ರಾವಣ ಮಾಸ ಹಾಗೂ ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ತಿಂಗಳ ಕಾಲ ಮಾಂಸ ಮಾರಾಟವನ್ನು ನಿಷೇಧಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರು.
ಜೆಡಿಎಸ್ ಬೆಳಗಾವಿ ಯುವ ಘಟಕದ ಅಧ್ಯಕ್ಷ ಬಿ.ಎನ್. ಪಾಟೀಲ ಅವರ ನೇತ್ರತ್ವದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸುಕ್ಷೇತ್ರ ದತ್ತ ಮಹಾರಾಜರ ಪಂತ ಬಾಳೇಕುಂದ್ರಿ ಗ್ರಾಮದ ಕದಲಿಪುರವಾಸಿ ಉಮಾರಾಮೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಪ್ರತಿನಿತ್ಯ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವ ನಿಟ್ಟಿನಲ್ಲಿ ಮಾಂಸದ ಅಂಗಡಿಗಳು ಹಾಗೂ ಖಸಾಯಿಖಾನೆಗಳಲ್ಲಿ ಮಾಂಸ ಮಾರಾಟಕ್ಕೆ ನಿಯಮಾನುಸಾರ ನಿರ್ಬಂಧ ವಿಧಿಸುವಂತೆ ಮನವಿ ಮೂಲಕ ಒತ್ತಾಯಿಸಿದರು.

ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಪಂಚಾಯಿತಿ ಆಡಳಿತವು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರದ ನಿಯಮಾವಳಿಗಳ ಅನ್ವಯ ತಕ್ಷಣ ಸೂಕ್ತ ಕ್ರಮ ಕೈಗೊಂಡು ಶ್ರಾವಣ ಮಾಸದ ಧಾರ್ಮಿಕ ವಾತಾವರಣ ಹಾಗೂ ಪವಿತ್ರತೆಯನ್ನು ಕಾಪಾಡಬೇಕು ಎಂದು ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಆಗ್ರಹಿಸಿದರು.

ಮನವಿ ಸಲ್ಲಿಸಿದ ಬಳಿಕವೂ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಮಾಂಸ ಮಾರಾಟ ಮುಂದುವರಿಸಿದರೆ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪ್ರಜಾಸತ್ತಾತ್ಮಕ ಹಾಗೂ ಕಾನೂನುಬದ್ಧ ರೀತಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.**********************************

Leave a Reply

Your email address will not be published. Required fields are marked *

Back to top button