ಪ್ರಕೃತಿ ಬೆಳಗಾವಿ

*ಆರ್‌ ಸಿಯು ಕ್ರೀಡಾಪಟುಗಳ ಸಾಧನೆ ಕೊಂಡಾಡಿದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ್*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕ್ರೀಡಾಪಟುಗಳು ತಮ್ಮ ಪ್ರತಿಭೆ, ಪರಿಶ್ರಮ ಹಾಗೂ ಶಿಸ್ತಿನ ಮೂಲಕ ವಿಶ್ವವಿದ್ಯಾಲಯಕ್ಕೆ ಕೀರ್ತಿ ತರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಕ್ರೀಡಾಪಟುಗಳ ಸಾಧನೆಗೆ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರ ನೀಡಲಾಗುವುದು. ಕ್ರೀಡಾಪಟುಗಳು ಸಾಧನೆಯ ಹಾದಿಯಲ್ಲಿ ಮತ್ತಷ್ಟು ಮುನ್ನಡೆಯಬೇಕು ಎಂದು ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ್ ಹೇಳಿದರು.

ನಗರದ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ದೈಹಿಕ ಶಿಕ್ಷಣ ನಿರ್ದೇಶಕರ ವಾರ್ಷಿಕ ಸಭೆಯಲ್ಲಿ ಅಂತರ್‌ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟಗಳು ಹಾಗೂ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಪದಕ ಗಳಿಸಿದ ವಿಶ್ವವಿದ್ಯಾಲಯದ ಕ್ರೀಡಾಪಟುಗಳಿಗೆ ನಗದು ಬಹುಮಾನ ವಿತರಿಸಿ ಅವರು ಮಾತನಾಡಿದರು.

ಕ್ರೀಡಾಪಟುಗಳಿಗೆ ಅಗತ್ಯವಿರುವ ಗುಣಮಟ್ಟದ ತರಬೇತಿ, ಕ್ರೀಡಾ ಮೂಲಸೌಕರ್ಯ ಹಾಗೂ ಇತರೆ ಸೌಲಭ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ವಿಶ್ವವಿದ್ಯಾಲಯ ಆದ್ಯತೆ ನೀಡಲಿದೆ. ಕ್ರೀಡಾಪಟುಗಳು ಇದೇ ಉತ್ಸಾಹದಿಂದ ಮುಂದುವರಿದು, ವಿಶ್ವವಿದ್ಯಾಲಯದ ಕೀರ್ತಿಯನ್ನು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಅವರು ಆಶಿಸಿದರು.

ಹಿರೇಬಾಗೇವಾಡಿ ಆವರಣದಲ್ಲಿ ಕ್ರೀಡಾ ಸೌಲಭ್ಯಗಳ ಅಭಿವೃದ್ಧಿ: ಮುಂಬರುವ ದಿನಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಆವರಣದಲ್ಲಿ ಅತ್ಯುತ್ತಮ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಕಾರ್ಯಪ್ರವೃತ್ತವಾಗಿದೆ. ಕ್ರೀಡಾಪಟುಗಳಿಗಾಗಿ ಒಳಾಂಗಣ ಕ್ರೀಡಾಂಗಣ ಸೇರಿದಂತೆ ವಿವಿಧ ಕ್ರೀಡಾ ಸೌಲಭ್ಯಗಳು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕುಲಪತಿ ತಿಳಿಸಿದರು.

ವಿಶ್ವವಿದ್ಯಾಲಯದ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು. ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವುದು, ಗುಣಮಟ್ಟದ ತರಬೇತಿ ಒದಗಿಸುವುದು ಹಾಗೂ ಕ್ರೀಡಾ ಪ್ರತಿಭೆಯನ್ನು ಉತ್ತೇಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ ಅವರ ಕಾರ್ಯವೈಖರಿಯ ಬಗ್ಗೆ ಕುಲಪತಿ ಸಂತಸ ವ್ಯಕ್ತಪಡಿಸಿದರು. ಕ್ರೀಡಾ ನಿರ್ದೇಶಕರು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಮೂಲಕ ವಿಶ್ವವಿದ್ಯಾಲಯದ ಕ್ರೀಡಾ ಘನತೆಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ವಿಶ್ವವಿದ್ಯಾಲಯದ ಕ್ರೀಡಾ ಕ್ಷೇತ್ರದ ಪ್ರಗತಿ ಹಾಗೂ ಸಾಧನೆಗಳ ಪಕ್ಷಿನೋಟವನ್ನು ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜಗದೀಶ್ ಗಸ್ತಿ ಅವರು ಸಭೆಯಲ್ಲಿ ಮಂಡಿಸಿದರು.

ಈ ಸಂದರ್ಭದಲ್ಲಿ ಡಾ. ರವಿ ಗೋಲಾ ಅವರು ಸ್ವಾಗತಿಸಿದರು. ಅಕ್ಕಮಹಾದೇವಿ ನಿರೂಪಿಸಿದರು. ಡಾ. ರಮೇಶ್ ನಾಗರಡ್ಡಿ ವಂದಿಸಿದರು.********************************

Leave a Reply

Your email address will not be published. Required fields are marked *

Back to top button