*ಗಾಳಿಪಟ ಮಾಂಜಾ ದಾರಕ್ಕೆ ಬೈಕ್ ಸವಾರ ಬಲಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗುರುವಾರ ಬೆಳಗಾವಿಯ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಮೃತ ಯುವಕನನ್ನು ಬೆಳಗಾವಿಯ ಮಹಾಂತೇಶ ನಗರದ ಧ್ರುವ ಕರ್ಜಗಿ (19) ಎಂದು ಗುರುತಿಸಲಾಗಿದೆ.
ಗುರುವಾರ ಬೈಕ್ನಲ್ಲಿ ಸಂಚರಿಸುತ್ತಿದ್ದ ಧ್ರುವ ಅವರ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿಕೊಂಡಿದೆ. ಇದರಿಂದ ತೀವ್ರ ಗಾಯಗೊಂಡ ಅವರು ಬೈಕ್ ಮೇಲೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುವಕನ ದಿಢೀರ್ ಸಾವಿನಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಾಂಜಾ ದಾರದ ಮಾರಾಟ ಮತ್ತು ಬಳಕೆಗೆ ನಿಷೇಧವಿದ್ದರೂ ಮಾರುಕಟ್ಟೆಯಲ್ಲಿ ಇಂತಹ ಅಪಾಯಕಾರಿ ದಾರಗಳ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡುವ ಮಾಂಜಾ ದಾರದ ಮಾರಾಟ ತಡೆಯುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.
ಗಾಳಿಪಟದ ಮಾಂಜಾ ದಾರದಿಂದ ಮತ್ತೊಂದು ಅಮೂಲ್ಯ ಜೀವ ಬಲಿಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸಿದೆ. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಬೆಳಗಾವಿ ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.*************************************





