ಪ್ರಕೃತಿ ಬೆಳಗಾವಿ

*ಮಾರಿಹಾಳ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆ*

*ಮಾರಿಹಾಳ: ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಹಾಗೂ ಜಾತ್ರಾ ಸಮಿತಿಯೊಂದಿಗೆ ಸಮನ್ವಯಕ್ಕೆ ಒತ್ತು*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಾರ್ಚ್ ತಿಂಗಳಿನಲ್ಲಿ ಮಾರಿಹಾಳ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ, ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು.

ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಶ್ರೀ ಮಹಾಲಕ್ಷ್ಮಿ ದೇವಿಯನ್ನು ಬಣ್ಣಕ್ಕೆ ಬೀಳ್ಕೊಡುವ ಪವಿತ್ರ ಸಂಪ್ರದಾಯದ ಸಂದರ್ಭದಲ್ಲಿ ಗ್ರಾಮಕ್ಕೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ದೇವಿಗೆ ಭಕ್ತಿಭಾವದಿಂದ ಉಡಿ ತುಂಬಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕೃಪೆಯಿಂದ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಲಭಿಸಲಿ, ಕ್ಷೇತ್ರದಲ್ಲಿ ಅಭಿವೃದ್ಧಿ ಮತ್ತು ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥಿಸಿದರು.

ಮಾರಿಹಾಳ ಗ್ರಾಮದ ಆರಾಧ್ಯ ದೈವವಾಗಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಯೋಜಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಧಾರ್ಮಿಕ ಕಾರ್ಯಕ್ರಮದ ಬಳಿಕ ಜಾತ್ರಾ ಕಮಿಟಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಜಾತ್ರಾ ಮಹೋತ್ಸವದ ಯಶಸ್ವಿ ಆಯೋಜನೆಗೆ ಕೈಗೊಳ್ಳಬೇಕಾದ ವಿವಿಧ ಸಿದ್ಧತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ವಿಶೇಷವಾಗಿ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯ, ವಿದ್ಯುತ್ ದೀಪಗಳ ವ್ಯವಸ್ಥೆ, ಸುಗಮ ಸಂಚಾರ, ವಾಹನಗಳ ಪಾರ್ಕಿಂಗ್, ರಸ್ತೆ ಸೌಲಭ್ಯ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಚರ್ಚಿಸಲಾಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣ, ಭದ್ರತೆ, ತುರ್ತು ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆಯೂ ಗಮನಹರಿಸಲಾಯಿತು.

ಜಾತ್ರಾ ಮಹೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಗ್ರಾಮದ ಜನರ ಒಗ್ಗಟ್ಟು, ಪರಂಪರೆ, ಸಂಸ್ಕೃತಿ ಹಾಗೂ ಭಕ್ತಿಭಾವವನ್ನು ಪ್ರತಿಬಿಂಬಿಸುವ ಮಹತ್ವದ ಉತ್ಸವವಾಗಿದೆ. ಹೀಗಾಗಿ ಗ್ರಾಮದ ಪ್ರತಿಯೊಬ್ಬರೂ ಪರಸ್ಪರ ಸಹಕಾರ ಮತ್ತು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.

ಜಾತ್ರಾ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಹಿರಿಯರು ಮುಂದಿಟ್ಟ ಸಲಹೆಗಳನ್ನು ಆಲಿಸಿದ ಅವರು, ಭಕ್ತಾದಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ಮತ್ತು ಸಮನ್ವಯಕ್ಕೆ ಆದ್ಯತೆ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಅಪಾರ ಸಂಖ್ಯೆಯ ಭಕ್ತಾದಿಗಳು, ಜಾತ್ರಾ ಕಮಿಟಿಯ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.*******************************

Leave a Reply

Your email address will not be published. Required fields are marked *

Back to top button