*ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ: ಸುಳ್ಳು ಸುದ್ದಿ ಹರಡುವವರ ವಿರುದ್ಧವೂ ಕ್ರಮ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕೆಪಿಎಸ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮೇಲೆ ಪೊಲೀಸರು ವಿಶೇಷ ನಿಗಾ ಇರಿಸಲಿದ್ದಾರೆ. ಮೆಟಲ್ ಡಿಟೆಕ್ಟರ್, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಿಸಲಾಗುವುದು. ಜಾಮರ್ಗಳ ಮೂಲಕವೂ ಪರಿಶೀಲನೆ ನಡೆಸಲಾಗುತ್ತದೆ.
ಪರೀಕ್ಷೆ ಮುಗಿದ ಬಳಿಕ ಒಎಂಆರ್ (OMR) ಉತ್ತರ ಪತ್ರಿಕೆಗಳನ್ನು ಪೊಲೀಸ್ ಎಸ್ಕಾರ್ಟ್ ಭದ್ರತೆಯೊಂದಿಗೆ ನಿಗದಿತ ಸ್ಥಳಕ್ಕೆ ಸುರಕ್ಷಿತವಾಗಿ ಸಾಗಿಸಲಾಗುವುದು.
ಬೆಳಗ್ಗೆ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸುವಾಗಲೂ ಪೊಲೀಸ್ ಎಸ್ಕಾರ್ಟ್ ಭದ್ರತೆ ಒದಗಿಸಲಾಗುತ್ತದೆ. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ವಾಪಸ್ ಸಾಗಿಸುವವರೆಗೂ ಬಿಗಿ ಪೊಲೀಸ್ ಬಂದೋಬಸ್ತ್ ಇರಲಿದೆ.
ಇದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಕೇಂದ್ರಗಳಲ್ಲಿನ ಅಕ್ರಮಗಳು ಸೇರಿದಂತೆ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆಯೂ ಪೊಲೀಸರು ನಿಗಾ ಇಡಲಿದ್ದಾರೆ. ಇಂತಹ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.**********************************






