ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ರಾಹುಲ್ ಜಾರಕಿಹೊಳಿ ಆಯ್ಕೆ: ಶಾಸಕ ಬಾಲಚಂದ್ರ ಜಾರಕಿಹೊಳಿ…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ಸೇರಿ ಎಲ್ಲರ ಆಶಯದಂತೆ ಜಿಲ್ಲೆಯಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ನಗರದ ಧರ್ಮನಾಥ ಭವನದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾದ ರಾಹುಲ್ ಜಾರಕಿಹೊಳಿ ಅವರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ.
ಆದ್ದರಿಂದ ಅವರಿಗೆ ಪ್ರತಿಯೊಂದು ಸಭೆಯಲ್ಲಿ ಪಾಲ್ಗೊಂಡು ಬಿಡಿಸಿಸಿ ಬ್ಯಾಂಕ್ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದ್ದೇನೆಂದು ತಿಳಿಸಿದರು.
ಪ್ರತಿ ಐದು ವರ್ಷಕ್ಕೊಮ್ಮೆ ಬಿಡಿಸಿಸಿ ಬ್ಯಾಂಕ್ ನಿಂದ ಅಪೆಕ್ಸ್ ಬ್ಯಾಂಕ್ ಒಬ್ಬರನ್ನು ನಿರ್ದೇಶಕರಾಗಿ ನೇಮಕ ಮಾಡಲಾಗುತ್ತದೆ. ಈ ಮೊದಲು ಬೆಳಗಾವಿ ಜಿಲ್ಲೆಯಿಂದ ಶಾಸಕ ಲಕ್ಷ್ಮಣ ಸವದಿ ಅವರೇ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಹೆಚ್ಚಿನ ಅವಧಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಣ್ಣಾಸಾಹೇಬ್ ಜೊಲ್ಲೆ ಅವರು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಮೇಲೆ ಅವರ ನೇತೃತ್ವದಲ್ಲಿ ರಾಹುಲ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಅಣ್ಣಾಸಾಹೇಬ್ ಜೊಲ್ಲೆ ಅವರು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಮೇಲೆ ಪ್ರತಿಯೊಂದು ತಾಲೂಕಿನಲ್ಲಿ ಸಭೆ ಮಾಡುವ ಮೂಲಕ ಆಯಾ ತಾಲೂಕಿನ ಪಿಕೆಪಿಎಸ್ ಸದಸ್ಯರ ಸಮಸ್ಯೆಗಳನ್ನು ಆಲಿಸಿ, ರೈತರಿಗೆ ಸದುಪಯೋಗ ಆಗುವಂತಹ ಯೋಜನೆಗಳನ್ನು ರೂಪಿಸಲಿದ್ದಾರೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಲ್ಲಿ ಚಿಕ್ಕೋಡಿ, ಗೋಕಾಕ ಜಿಲ್ಲೆಗಳ ರಚನೆಗೆ ಆಗ್ರಹಿಸಿ ಜಿಲ್ಲೆಯ ಪ್ರತಿನಿಧಿಗಳು, ಸ್ವಾಮೀಜಿಗಳನ್ನು ಒಳಗೊಂಡ ನಿಯೋಗ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚಿಕ್ಕೋಡಿ, ಗೋಕಾಕ ಜಿಲ್ಲೆಗಳ ರಚನೆ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಅನೇಕ ವರ್ಷಗಳಿಂದ ಗೋಕಾಕ ಜಿಲ್ಲಾ ರಚನೆಗಾಗಿ ನಮ್ಮವರು ಅನೇಕ ಹೋರಾಟಗಳನ್ನು ಮಾಡುತ್ತಿದ್ದಾರೆ. ಹಿಂದಿನ ಸರ್ಕಾರಗಳು ಜಿಲ್ಲಾ ರಚನೆಗಾಗಿ ನೇಮಿಸಿದ್ದ ನಾಲ್ಕೂ ಆಯೋಗಗಳು ಸಹ ಆಡಳಿತದ ಹಿತದೃಷ್ಟಿಯಿಂದ ಬೆಳಗಾವಿಯನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ರಚನೆ ಮಾಡುವಂತೆಯೂ ಅಂದಿನ ಸರ್ಕಾರಗಳಿಗೆ ಶಿಫಾರಸ್ಸು ಮಾಡಿದ್ದವು.
ಗೋಕಾಕ ಜಿಲ್ಲಾ ರಚನೆಗಾಗಿ ಹಲವು ಬಾರಿ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇವೆ. ಅನೇಕ ಹೋರಾಟಗಳನ್ನು ಸಹ ಮಾಡುತ್ತಿದ್ದೇವೆ. ಅವಿಭಜಿತ ಗೋಕಾಕ ತಾಲೂಕಿನ ಮಠಾಧೀಶರು, ವಕೀಲರು, ವರ್ತಕರು, ವಿವಿಧ ಸಂಘಟನೆಗಳ ಪ್ರಮುಖರು, ರಾಜಕೀಯ ಮುಖಂಡರು ಸೇರಿಕೊಂಡು ನಿಯೋಜಿತ ಗೋಕಾಕ ಜಿಲ್ಲಾ ಚಾಲನಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಹೋರಾಟವನ್ನು ಪಕ್ಷಾತೀತವಾಗಿ ಮಾಡುತ್ತ ಬರುತ್ತಿದ್ದೇವೆ. ಜನರಿಗೆ ಉತ್ತಮ ಆಡಳಿತ ನೀಡಲು ಬೆಳಗಾವಿಯನ್ನು ವಿಂಗಡಿಸಬೇಕಾಗಿದೆ ಎಂದರು.
ಬಿಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ ಮಾತನಾಡಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ, ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರು ಸೇರಿ ನನ್ನನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಹಿರಿಯರ ಮಾರ್ಗದಶನಲ್ಲಿ ಕೆಲಸ ಮಾಡುವ ಮೂಲಕ ಜಿಲ್ಲೆಯ ಪ್ರಗತಿಗೆ ಶ್ರಮಿಸುತ್ತೇನೆಂದು ಹೇಳಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವರಿದ್ದರು.********************************






