ಪ್ರಕೃತಿ ಬೆಳಗಾವಿ

*ಶಾಲೆ, ಅಂಗನವಾಡಿ, ವಸತಿ ನಿಲಯಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ: ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಸರ್ಕಾರಿ ಶಾಲೆ, ಅಂಗನವಾಡಿಗಳು ಹಾಗೂ ವಸತಿ ನಿಲಯಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಮೂಲ ಸೌಕರ್ಯಗಳನ್ನು ಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶಾಲೆ ಹಾಗೂ ಅಂಗನವಾಡಿ ಪ್ರಾರಂಭೋತ್ಸವ ಕುರಿತು ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶೇಷವಾಗಿ ತಮ್ಮ ವ್ಯಾಪ್ತಿಯಲ್ಲಿನ ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿದಾಗ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಬೇಕು. ವಸತಿ ನಿಲಯದಲ್ಲಿ ಏನಾದರು ಸಮಸ್ಯೆಗಳಿದ್ದರೆ ಕೂಡಲೇ ಪರಿಹರಿಸಬೇಕು ಎಂದು ಸೂಚಿಸಿದರು.

ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಕ್ರಮವಹಿಸಿ:
ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಅಗತ್ಯ ಕ್ರಮವಹಿಸಬೇಕು. ಯಾವ ಮಕ್ಕಳು ಕೂಡ ಶಾಲೆಯಿಂದ ಹೊರಗುಳಿಯದಂತೆ ನಿರಂತರವಾಗಿ ಪರಿಶೀಲಿಸಬೇಕು. ಶಾಲೆಗಳಿಂದ ಹೊರಗುಳಿಯುವ ಮಕ್ಕಳ ಮನವೊಲಿಸಿ ಶಾಲೆಗೆ ಕರೆತರಬೇಕು ಎಂದು ಸೂಚನೆ ನೀಡಿದರು. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಾತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಶಾಲೆ, ಅಂಗನವಾಡಿ, ಕಾಲೇಜು ಹಾಗೂ ವಸತಿ ನಿಲಯಗಳಿಗೆ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿ ಇನ್ನಿತರೇ ಮೂಲಸೌಕರ್ಯ ಒದಗಿಸಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಜಿಪಂ ಸಿಇಒ ರವರು ಮಾಹಿತಿ ಪಡೆದರು.

ಅಂಗನವಾಡಿಗಳಲ್ಲಿ ತಿಂಗಳ ಮೂರನೇ ಶನಿವಾರ ಹಾಗೂ ಶಾಲೆಗಳಲ್ಲಿ ತಿಂಗಳ ನಾಲ್ಕನೇ ಶಾನಿವಾರ ಕಡ್ಡಾಯವಾಗಿ ಪಾಲಕರ ಸಭೆಗಳನ್ನು ಕೈಗೊಳ್ಳಬೇಕು. ತಾಲೂಕಾಮಟ್ಟದ ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗವಹಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಪ್ರಧಾನಮಂತ್ರಿ ಪೋಷಣ್-ಶಕ್ತಿ ನಿರ್ಮಾಣ ಯೋಜನೆಯ ಜಿಲ್ಲಾ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.********************************

Leave a Reply

Your email address will not be published. Required fields are marked *

Back to top button