ಪ್ರಕೃತಿ ಬೆಳಗಾವಿ

*62 ಜನ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದ ಸನ್ಮಾನ್ಯ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ*

*ಗ್ರಾಮಗಳ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸಲು ಸಲಹೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಆಂತರಿಕವಾಗಿ ನೇಮಕಾತಿ ಹೊಂದಿದ ಗ್ರೇಡ್-2 ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ ನೇಮಕಾತಿ ಆದೇಶ ವಿತರಣಾ ಕಾರ್ಯಕ್ರಮಕ್ಕೆ ಸನ್ಮಾನ್ಯ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿ, ಆದೇಶ ಪತ್ರಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು ಗ್ರಾಮ ಪಂಚಾಯತಿಗಳು ಗ್ರಾಮೀಣ ಅಭಿವೃದ್ಧಿಯ ಬೆನ್ನೆಲುಬಾಗಿದ್ದು, ಆಂತರಿಕ ನೇಮಕಾತಿ ಮೂಲಕ ಬಡ್ತಿ ಪಡೆದ ಸಿಬ್ಬಂದಿಗಳು ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರ ಕೆಲಸಗಳು ವಿಳಂಬವಾಗದಂತೆ ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಹೊಸದಾಗಿ ನೇಮಕಗೊಂಡ 62 ಸಿಬ್ಬಂದಿಗಳಿಂದ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಆಡಳಿತ ವ್ಯವಸ್ಥೆ ಇನ್ನಷ್ಟು ಬಲಿಷ್ಠವಾಗಲಿದ್ದು, ಸಾರ್ವಜನಿಕರಿಗೆ ಸ್ಥಳೀಯ ಮಟ್ಟದಲ್ಲೇ ತ್ವರಿತ ಹಾಗೂ ಪರಿಣಾಮಕಾರಿ ಸೇವೆ ದೊರೆಯಲಿದೆ. ಆಡಳಿತದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಜನಸೇವೆಗೆ ಆದ್ಯತೆ ನೀಡುವಂತೆ ಸಚಿವರು ಸೂಚಿಸಿದರು.

62 ಸಿಬ್ಬಂದಿಗೆ ನೇಮಕಾತಿ ಆದೇಶ:

ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಮಾತನಾಡಿ, ಆಂತರಿಕ ನೇಮಕಾತಿ ಪ್ರಕ್ರಿಯೆಯನ್ನು ನಿಯಮಾನುಸಾರ ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗಿದೆ. ಕರವಸೂಲಿಗಾರ, ಕ್ಲರ್ಕ/ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ 51 ಸಿಬ್ಬಂದಿಗಳನ್ನು ಗ್ರೇಡ್ 2 ಕಾರ್ಯದರ್ಶಿ ಹುದ್ದೆಗೆ ನೇಮಕಾತಿ ಮಾಡಲಾಗಿದೆ ಹಾಗೂ 11 ಸಿಬ್ಬಂದಿಗಳನ್ನು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 62 ಜನ ಸಿಬ್ಬಂದಿಗೆ ನೇಮಕಾತಿ ಆದೇಶಗಳ ಪ್ರತ್ರಗಳನ್ನು ವಿತರಿಸಲಾಯಿತು.

ಮಾನ್ಯ ಶಾಸಕರಾದ ಶ್ರೀ ಆಸೀಫ್ (ರಾಜು) ಸೇಠ್, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಸುನೀಲ ಹಣಮನ್ನವರ್, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಕೆ.ರಾಮರಾಜನ್ ಸೇರಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.**********************************

Leave a Reply

Your email address will not be published. Required fields are marked *

Back to top button