*ಸುತಗಟ್ಟಿ ಬಳಿ ಚಿರತೆ ಸೆರೆ ಗ್ರಾಮಸ್ಥರ ನಿಟ್ಟುಸಿರು ವಲಯ ಅರಣ್ಯಾಧಿಕಾರಿ ಬಿ.ಎಲ್. ಸನದಿ ಹಾಗೂ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಆಗಸ್ಟ್ 5 : ಕಳೆದ ಕೆಲವು ದಿನಗಳಿಂದ ಬೆಳಗಾವಿ ತಾಲೂಕಿನ ಶಿವಾಪುರ–ಪರಿಶೆನಟ್ಟಿ ಕ್ರಾಸ್, ಹೊಸ ಇದ್ದಲ್ ಹೊಂಡ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ಹರಿದಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಬುಧವಾರ (05-08-2026) ಸುತಗಟ್ಟಿ ಸಮೀಪ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದಿದೆ.
ವಲಯ ಅರಣ್ಯಾಧಿಕಾರಿ ಬಿ.ಎಲ್. ಸನದಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಹಲವು ದಿನಗಳ ಕಾಲ ನಿಗಾ ವಹಿಸಿ, ಸೂಕ್ತ ಯೋಜನೆಯೊಂದಿಗೆ ಕಾರ್ಯಾಚರಣೆ ನಡೆಸಿದ ಪರಿಣಾಮ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ಜನರು ಆತಂಕದಲ್ಲಿದ್ದರು. ರೈತರು ಹೊಲಗಳಿಗೆ ತೆರಳಲು, ಸಾರ್ವಜನಿಕರು ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಸಂಚರಿಸಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇದೀಗ ಚಿರತೆ ಸೆರೆ ಸಿಕ್ಕಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳೀಯರ ಪ್ರಕಾರ, ಈ ಹಿಂದೆ ಚಿರತೆ ಕಾಣಿಸಿಕೊಂಡಿದ್ದರೂ ಸಮರ್ಪಕ ಕ್ರಮ ಕೈಗೊಳ್ಳುವಲ್ಲಿ ಅಗತ್ಯ ಚುರುಕುತನ ಕಾಣಿಸಿರಲಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ವಲಯ ಅರಣ್ಯಾಧಿಕಾರಿ ಬಿ.ಎಲ್. ಸನದಿ ಅವರು ಸಿಬ್ಬಂದಿಯೊಂದಿಗೆ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿರುವುದಕ್ಕೆ ಹಲವು ಗ್ರಾಮಗಳ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಅರಣ್ಯ ಇಲಾಖೆ ಸಾರ್ವಜನಿಕರಿಗೆ ಅನಗತ್ಯವಾಗಿ ಕಾಡುಪ್ರಾಣಿಗಳ ಸಮೀಪ ಹೋಗದಂತೆ, ಕಂಡುಬಂದರೆ ತಕ್ಷಣ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದೆ. ಕಾಡುಪ್ರಾಣಿಗಳು ಸಾಮಾನ್ಯವಾಗಿ ಮಾನವರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ಮಾಡುವುದಿಲ್ಲ. ಆದರೆ ಅವು ಜನವಸತಿ ಪ್ರದೇಶಗಳಿಗೆ ಬಂದಾಗ ಎಚ್ಚರಿಕೆ ವಹಿಸುವುದು ಅಗತ್ಯವೆಂದು ಇಲಾಖೆ ತಿಳಿಸಿದೆ.************************************






