ಪ್ರಕೃತಿ ಬೆಳಗಾವಿ

*15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಸುಮಾರು 15 ವರ್ಷಗಳ ಬಳಿಕ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯನ್ನು ಯಶಸ್ವಿಯಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಜಾತ್ರಾ ಕಮೀಟಿಯ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಪ್ರಮುಖ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ಮಾರಿಹಾಳ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆಯು ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತರಲ್ಲಿ ವಿಶೇಷ ಉತ್ಸಾಹ ಮೂಡಿದೆ. ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಹಾಗೂ ಜಾತ್ರೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ವಿವಿಧ ಕಾಮಗಾರಿಗಳ ಕುರಿತು ಪ್ರಮುಖವಾಗಿ ಚರ್ಚೆ ನಡೆಯಿತು. ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದು, ಭಕ್ತರಿಗೆ ಅನುಕೂಲಕರ ವಾತಾವರಣ ಕಲ್ಪಿಸುವುದು, ಜಾತ್ರಾ ಸಂದರ್ಭದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಲಾಯಿತು.

ಅದೇ ರೀತಿ, ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರಿಗೆ ಸುಲಭ ಹಾಗೂ ತ್ವರಿತ ದರ್ಶನಕ್ಕೆ ಅವಕಾಶ ಕಲ್ಪಿಸುವುದು, ಸರತಿ ಸಾಲಿನ ವ್ಯವಸ್ಥೆ, ಕುಡಿಯುವ ನೀರು, ವಾಹನ ನಿಲುಗಡೆ, ಸ್ವಚ್ಛತೆ ಹಾಗೂ ಅಗತ್ಯವಿರುವ ಕಡೆಗಳಲ್ಲಿ ಬೆಳಕಿನ ವ್ಯವಸ್ಥೆ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಾತ್ರಾ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆಯಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಹೆಬ್ಬಾಳಕರ್ ಅವರು ಸೂಚಿಸಿದರು.
ಭಕ್ತರ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಮಾರ್ಗಸೂಚಿ ರೂಪಿಸುವುದು, ಅಗತ್ಯವಿರುವ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸುವುದು ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಕುರಿತು ಚರ್ಚಿಸಲಾಯಿತು.

ಇದರ ಜೊತೆಗೆ, ಜಾತ್ರೆಯ ಹಿನ್ನೆಲೆಯಲ್ಲಿ ಮಾರಿಹಾಳ ಗ್ರಾಮದಲ್ಲಿ ಅಗತ್ಯವಿರುವ ರಸ್ತೆ ಅಭಿವೃದ್ಧಿ, ಗಟಾರ ನಿರ್ಮಾಣ ಹಾಗೂ ದುರಸ್ತಿ, ಬೀದಿ ದೀಪಗಳ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಸಭೆಯಲ್ಲಿ ವಿಶೇಷ ಗಮನ ಹರಿಸಲಾಯಿತು.

ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಜಾತ್ರೆಯು ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ಗ್ರಾಮಸ್ಥರು ಹಾಗೂ ಭಕ್ತರನ್ನು ಒಗ್ಗೂಡಿಸುವ ಪ್ರಮುಖ ಕಾರ್ಯಕ್ರಮವಾಗಲಿದೆ. ಹೀಗಾಗಿ ಜಾತ್ರೆಯನ್ನು ಯಾವುದೇ ಲೋಪದೋಷಗಳಿಲ್ಲದೆ ವ್ಯವಸ್ಥಿತವಾಗಿ ನಡೆಸಲು ಗ್ರಾಮಸ್ಥರು, ಜಾತ್ರಾ ಕಮೀಟಿ, ಸ್ಥಳೀಯ ಮುಖಂಡರು ಹಾಗೂ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಜಾತ್ರೆಯ ಯಶಸ್ಸಿಗೆ ಗ್ರಾಮಸ್ಥರ ಸಹಕಾರ ಅತ್ಯಂತ ಮುಖ್ಯವಾಗಿದ್ದು, ಭಕ್ತರಿಗೆ ಉತ್ತಮ ಅನುಭವ ದೊರೆಯುವಂತೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂಬ ಸಂದೇಶವೂ ಸಭೆಯಲ್ಲಿ ವ್ಯಕ್ತವಾಯಿತು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾರಿಹಾಳ ಗ್ರಾಮದ ಹಿರಿಯರು, ಜಾತ್ರಾ ಕಮೀಟಿಯ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.*******************************

Leave a Reply

Your email address will not be published. Required fields are marked *

Back to top button