*ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ನೈರ್ಮಲ್ಯ ಮತ್ತು ಮೂಲಸೌಕರ್ಯ ಪರಿಶೀಲಿಸಿದ ಜಿ.ಪಂ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ, ಆಗಸ್ಟ್ 24 : ಬೆಳಗಾವಿ ತಾಲೂಕಿನ ಉಚಗಾಂವ ಹಾಗೂ ಬೆಕ್ಕಿನಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿರುವ ಸ್ವಚ್ಛ ಭಾರತ ಮಿಷನ್ ಯೋಜನೆಯ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸೋಮವಾರ(ಆ.24) ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಗ್ರಾಮಗಳಲ್ಲಿ ನೈರ್ಮಲ್ಯ ಹಾಗೂ ಮೂಲಸೌಕರ್ಯಗಳ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ನಿರ್ದೇಶನಗಳನ್ನು ನೀಡಿದರು.
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಪ್ರತಿ ಮನೆಯಲ್ಲೂ ಕಸವನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ವೈಯಕ್ತಿಕ ಶೌಚಾಲಯವಿಲ್ಲದ ಅರ್ಹರು ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಈಗಾಗಲೇ ಶೌಚಾಲಯ ಹೊಂದಿರುವವರು ಅವುಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದರು.
ಶೌಚಾಲಯಗಳ ಬಳಕೆಯಿಂದ ಸಾರ್ವಜನಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ನೀರು ಕಲುಷಿತಗೊಳ್ಳುವುದನ್ನು ತಡೆದು ಉತ್ತಮ ಪರಿಸರ ನಿರ್ಮಾಣಕ್ಕೆ ನೆರವಾಗುತ್ತದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿಯ ದೈನಂದಿನ ಆಡಳಿತ, ಸಿಬ್ಬಂದಿ ಹಾಗೂ ಗ್ರಂಥಪಾಲಕರ ವೇತನ ಮತ್ತು ತುರ್ತು ಖರ್ಚು-ವೆಚ್ಚಗಳನ್ನು ಕರ ವಸೂಲಾತಿ ನಿಧಿಯಿಂದಲೇ ನಿರ್ವಹಿಸಬೇಕಾಗುತ್ತದೆ. ಆದ್ದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರವಸೂಲಾತಿ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲು ಮತ್ತು ನಿಗದಿತ ಗುರಿಯನ್ನು ತಲುಪಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅದೇ ರೀತಿಯಾಗಿ ಪಂಚಾಯತಿ ವ್ಯಾಪ್ತಿಯ ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳ ಸುರಕ್ಷತೆಯನ್ನು ಪರಿಶೀಲಿಸಿ ಖಾತರಿಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಈ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಸೌಲಭ್ಯಗಳ ಮೇಲ್ವಿಚಾರಣೆ ನಡೆಸಲು ಇ-ಒ ಹಾಗೂ ಪಂಚಾಯಿತಿ ಸಿಬ್ಬಂದಿಗೆ ಜಿ.ಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಹೇಳಿದರು.
ಈ ಸಂದರ್ಭದಲ್ಲಿ ಇ-ಒ ಪ್ರವೀಣ್ ಕಟ್ಟಿ, ಪಿಡಿಓ ಶಿವಾಜಿ ಮಡಿವಾಳ, ಕಾರ್ಯದರ್ಶಿ ಪ್ರಿಯಾ ಮುರಗೋಡ ಹಾಗೂ ಖಜಾನೆ ಅಧಿಕಾರಿ ಜಗದೀಶ್ ಚಿನಿವಾರ್ ಉಪಸ್ಥಿತರಿದ್ದರು.********************************





