*ಬಸರಿಕಟ್ಟಿಯಲ್ಲಿ 60 ಲಕ್ಷ ರೂ. ವೆಚ್ಚದ ಶಾಲಾ ಕೊಠಡಿಗಳ ಉದ್ಘಾಟನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬಸರಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಮರಾಠಿ ಶಾಲೆಗಳಲ್ಲಿ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನಾಲ್ಕು ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಲಾಯಿತು.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಹೊಸ ಕೊಠಡಿಗಳ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಅಗತ್ಯವಾದ ತರಗತಿ ಕೊಠಡಿಗಳ ಸೌಲಭ್ಯ ದೊರೆಯಲಿದ್ದು, ಕನ್ನಡ ಹಾಗೂ ಮರಾಠಿ ಮಾಧ್ಯಮದ ವಿದ್ಯಾರ್ಥಿಗಳ ಕಲಿಕೆಗೆ ಮತ್ತಷ್ಟು ಅನುಕೂಲವಾಗಲಿದೆ.
ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸುರಕ್ಷಿತ ಹಾಗೂ ಉತ್ತಮ ವಾತಾವರಣ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮುಖಂಡರು ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗ್ರಾಮಗಳ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಶಿಕ್ಷಣ, ಧಾರ್ಮಿಕ ಕೇಂದ್ರಗಳು ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಸಿದ್ದರಾಯಿ ನಾಗರೊಳಿ, ಬಸವಣ್ಣಿ ಕೊಂಡಸಕೊಪ್ಪ, ಕೃಷ್ಣ ತೆರಳೆ, ರವಿ ಲೋಹಾರ್, ದಿಲೀಪ್, ಹೊಳೆಪ್ಪ ಪೂಜೇರಿ, ಪರಶುರಾಮ ಕಲ್ಲನಾಚೆ, ರಾಮಾ ಎಚ್., ಶ್ರೀಮತಿ ಜಳಕಿ ಸೇರಿದಂತೆ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು, ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.*******************************






