ಪ್ರಕೃತಿ ಬೆಳಗಾವಿ

*ಕೇಂದ್ರ ಅನುದಾನ ವಿಚಾರ: ನಿಖಿಲ್ ಕತ್ತಿ ಆರೋಪಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಖಡಕ್ ತಿರುಗೇಟು*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಯಾವುದೇ ವಿಶೇಷ ಅನುದಾನ ತರಲಾಗಿಲ್ಲ ಎಂದು ಹುಕ್ಕೇರಿ ಕ್ಷೇತ್ರದ ಶಾಸಕ ಶ್ರೀ ನಿಖಿಲ್ ಕತ್ತಿ ಅವರು ಮಾಡಿರುವ ಆರೋಪಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

2023ರಲ್ಲಿ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾದ ಸಂದರ್ಭದಲ್ಲಿ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF)ಯಿಂದ ಕರ್ನಾಟಕಕ್ಕೆ ನ್ಯಾಯಯುತವಾಗಿ ಬರಬೇಕಿದ್ದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಈ ಅನುದಾನಕ್ಕಾಗಿ ರಾಜ್ಯ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು.

ಕೇಂದ್ರದಲ್ಲಿ ತಮ್ಮದೇ ಪಕ್ಷದ ಸರ್ಕಾರವಿರುವುದನ್ನು ಹುಕ್ಕೇರಿ ಶಾಸಕರು ಗಮನದಲ್ಲಿಟ್ಟುಕೊಂಡು ಮಾತನಾಡಬೇಕು ಎಂದು ಅವರು ನಿಖಿಲ್ ಕತ್ತಿ ಅವರಿಗೆ ತಿರುಗೇಟು ನೀಡಿದರು.

ಇದೇ ವೇಳೆ, ಕೇಂದ್ರದ ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕಕ್ಕೆ ನ್ಯಾಯಯುತವಾಗಿ ಬರಬೇಕಿರುವ ₹2,000 ಕೋಟಿಗೂ ಅಧಿಕ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಈ ಅನುದಾನಕ್ಕಾಗಿ ರಾಜ್ಯ ಸರ್ಕಾರ ಮತ್ತೊಮ್ಮೆ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ ನಡೆಸಿದೆ ಎಂದು ಅವರು ತಿಳಿಸಿದರು.

ಅದೇ ರೀತಿ, 2023ರ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನ ಘೋಷಿಸಲಾಗಿತ್ತು. ಆದರೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಯೋಜನೆಗೆ ಇದುವರೆಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಆರೋಪಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಅನುದಾನಗಳ ವಿಚಾರದಲ್ಲಿ ಮೊದಲು ಸ್ಪಷ್ಟತೆ ನೀಡಲಿ; ನಂತರ ಇತರರ ವಿರುದ್ಧ ಆರೋಪ ಮಾಡಲಿ ಎಂಬ ಸಂದೇಶವನ್ನು ಸಂಸದೆ ತಮ್ಮ ಪ್ರತಿಕ್ರಿಯೆಯ ಮೂಲಕ ನೀಡಿದ್ದಾರೆ.*************************************

Leave a Reply

Your email address will not be published. Required fields are marked *

Back to top button