ಪ್ರಕೃತಿ ಬೆಳಗಾವಿ

ಬೆಳಗಾವಿ ಗ್ರಾಮೀಣ ಕ್ಷೇತ್ರ ಅಭಿವೃದ್ಧಿಗೆ ಬಾರಾಮತಿ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್…!!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ರಾಷ್ಟ್ರೀಯ ನಾಯಕ ಶರದ್ ಪವಾರ್ ಅಭಿವೃದ್ಧಿಪಡಿಸಿರುವ ಬಾರಾಮತಿ ಕ್ಷೇತ್ರದ ಮಾದರಿಯಲ್ಲೇ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕೆನ್ನುವ ಸಂಕಲ್ಪದೊಂದಿಗೆ ಕಾರ್ಯೋನ್ಮುಖನಾಗಿದ್ದೇನೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಯಳ್ಳೂರಿನಲ್ಲಿ ಶನಿವಾರ ಸ್ಥಳೀಯ ಮರಾಠಿ ಶಾಲೆಯ ಶತಕೋತ್ತರ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. 2013ರಲ್ಲಿ ಮೊದಲ ಬಾರಿಗೆ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಸಂದರ್ಭದಲ್ಲೇ ಬಾರಾಮತಿ ಮಾದರಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕೆನ್ನುವ ಕನಸು ಹೊತ್ತಿದ್ದೆ. ಅದೇ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜಕೀಯ ಹಿನ್ನೆಲೆ ಇಲ್ಲದ ಕುಟುಂಬದಿಂದ ಬಂದಿರುವ ನನ್ನಂತವರಿಗೆ ಶರದ್ ಪವಾರ ಅವರು ಆದರ್ಶರಾಗಿದ್ದಾರೆ. ಅವರಿಂದ ಬಹಳಷ್ಟು ಕಲಿತಿದ್ದೇನೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ಶಿವಾಜಿ ಪುತ್ಥಳಿ ಸ್ಥಾಪಿಸಿ ಅಭಿವೃದ್ಧಿಪಡಿಸಲಾಗಿದೆ. ಅಲ್ಲಿಗೆ ಒಮ್ಮೆ ಭೇಟಿ ನೀಡಬೇಕು ಎಂದು ಶರದ್ ಪವಾರ್ ಅವರಲ್ಲಿ ವಿನಂತಿಸಿದರು.

ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಸುಲಭವಲ್ಲ. ಆದರೆ ಈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ವಾತಂತ್ರ್ಯ ಪೂರ್ವದಿಂದಲೇ ಶಿಕ್ಷಣ ಸೇವೆ ನೀಡುವ ಮಹತ್ವದ ಕೆಲಸವನ್ನು ಮಾಡುತ್ತ ಬಂದಿದೆ. ಇದು ಕೇವಲ ಶಾಲೆಯಲ್ಲ, ಇದೊಂದು ವಿದ್ಯಾ ಮಂದಿರ. ಇಲ್ಲಿ ಕಲಿತ ಹಲವರು ರಾಜ್ಯ, ರಾಷ್ಟ್ರ, ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಶತಕೋತ್ತರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸುವರ್ಣ ಅವಕಾಶ ನನಗೆ ಸಿಕ್ಕಿದ್ದು ನನ್ನ ಸುದೈವ ಎಂದು ಹೆಬ್ಬಾಳಕರ್ ಹೇಳಿದರು.

ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ, ಮಾಜಿ‌ ಕೇಂದ್ರ ಸಚಿವರೂ ಆದ ಶರದ್ ಪವಾರ, ಶಿವಾಜಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಮಾಣಿಕರಾವ್ ಸಾಳುಂಕೆ, ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ್ ಕೋರೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ವಿಠ್ಠಲರಾವ್ ಹಲಗೇಕರ್, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಅರವಿಂದ ಪಾಟೀಲ, ರಾವಜಿ ಪಾಟೀಲ, ಎ‌ನ್.ಡಿ.ಗೋರೆ, ಸತೀಶ್ ಪಾಟೀಲ, ಗ್ರಾಮದ ಹಿರಿಯರು, ಮಹಿಳೆಯರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.*************************

Leave a Reply

Your email address will not be published. Required fields are marked *

Back to top button